ಉಡುಪಿ: ಬ್ರಹ್ಮಾವರ ತಾಲೂಕಿನ ಬಾಳೆಕುದ್ರು ಮಠದಲ್ಲಿ ಪೂಜಿಸಲ್ಪಡುತ್ತಿದ್ದ ಪುರಾತನ ವಿಗ್ರಹಗಳು ನಾಪತ್ತೆಯಾಗಿರುವ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮಠದ ಆರು ವಿಗ್ರಹಗಳನ್ನು ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ ಮಠಾಧೀಶರಾದ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ಮಠಕ್ಕೆ ಬೀಗ ಹಾಕಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಮಠದಲ್ಲಿದ್ದ ನರಸಿಂಹದೇವರು, ಗಣಪತಿ, ಮಹಿಷಮರ್ದಿನಿ ಸೇರಿದಂತೆ ಒಟ್ಟು ಆರು ವಿಗ್ರಹಗಳು ಕಾಣೆಯಾಗಿರುವುದಾಗಿ ಶಿಷ್ಯ ಸಮುದಾಯ ಆರೋಪಿಸಿದೆ. ಈ ಕುರಿತು ಪ್ರಶ್ನಿಸಿದಾಗ, ಹಳೆಯ ವಿಗ್ರಹಗಳನ್ನು ವಿಸರ್ಜಿಸಿ ಹೊಸ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ ಎಂದು ಸ್ವಾಮೀಜಿ ತಿಳಿಸಿದ್ದರು ಎನ್ನಲಾಗಿದೆ. ಆದರೆ, ನಾಪತ್ತೆಯಾಗಿದ್ದ ವಿಗ್ರಹಗಳನ್ನು ಮಾರಾಟಕ್ಕೆ ಇಡಲಾಗಿತ್ತು ಎಂಬ ಮಾಹಿತಿ ಇದೀಗ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ಮಠದ ಶಿಷ್ಯರಾದ ಜಗದೀಶ್ ಐತಾಳ್ ಅವರು ಈ ಕುರಿತು ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನಾಪತ್ತೆಯಾಗಿದ್ದ ವಿಗ್ರಹಗಳ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದ್ದವು. ಮಾರಾಟದ ಉದ್ದೇಶದಿಂದ ಅವುಗಳನ್ನು ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗಿತ್ತು ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಐತಾಳ್ ಪೊಲೀಸರನ್ನು ಸಂಪರ್ಕಿಸಿದ್ದರು.
ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದಾಗ ವಿಗ್ರಹಗಳ ಮಾರಾಟಕ್ಕೆ ಸಂಬಂಧಿಸಿದ ವಿಚಾರಗಳು ಬೆಳಕಿಗೆ ಬಂದಿವೆ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಸ್ವಾಮೀಜಿಯವರ ಪಾತ್ರದ ಬಗ್ಗೆಯೂ ಆರೋಪ ಕೇಳಿಬಂದಿದ್ದು, ಎಫ್‌ಐಆರ್ ದಾಖಲಾದ ಬಳಿಕ ಅವರು ಮಠದಿಂದ ತೆರಳಿದ್ದಾರೆ ಎನ್ನಲಾಗಿದೆ.
ಶತಮಾನಗಳ ಇತಿಹಾಸ ಹೊಂದಿರುವ ಭಾಗವತ ಸಂಪ್ರದಾಯದ ಬಾಳೆಕುದ್ರು ಮಠದಲ್ಲಿ ಸ್ವಾಮೀಜಿ ಮತ್ತು ಶಿಷ್ಯ ಸಮುದಾಯದ ನಡುವೆ ಹಿಂದಿನಿಂದಲೂ ಭಿನ್ನಾಭಿಪ್ರಾಯಗಳಿದ್ದವು ಎನ್ನಲಾಗಿದೆ. ಕಳೆದ ಒಂದೆರಡು ತಿಂಗಳಿನಿಂದ ಈ ಸಂಘರ್ಷ ಮತ್ತಷ್ಟು ತೀವ್ರಗೊಂಡಿತ್ತು. ಶೃಂಗೇರಿ ಶ್ರೀಗಳ ಕುರಿತು ಬಾಳೆಕುದ್ರು ಸ್ವಾಮೀಜಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪವೂ ವಿವಾದಕ್ಕೆ ಕಾರಣವಾಗಿತ್ತು.
ಇನ್ನು, ಮಠದ ವಿಗ್ರಹಗಳನ್ನು ಬೆಂಗಳೂರಿನ ಪ್ರಸಿದ್ಧಿ ಐಡಲ್ಸ್ ಸಂಸ್ಥೆಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಂಸ್ಥೆಯ ಮಾಲೀಕ ನಾಗೇಂದ್ರ ಪ್ರಸಾದ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಅನಿಲ್ ಕುಮಾರ್, ಜಯಲಕ್ಷ್ಮಿ ಮತ್ತು ಶ್ರೇಯಸ್ ಎಂಬವರ ಹೆಸರುಗಳೂ ಪ್ರಕರಣದಲ್ಲಿ ಕೇಳಿಬಂದಿವೆ.
ಪುರಾತನ ವಿಗ್ರಹಗಳ ನಾಪತ್ತೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಗಳ ಕುರಿತು ಅಧಿಕೃತ ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.








