ಭೋಪಾಲ್: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಬುಧವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಹಿಳೆಯರು ಸೇರಿದಂತೆ ಕನಿಷ್ಠ 10 ರಿಂದ 15 ಮಂದಿ ಒಳಗೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಈಗಾಗಲೇ ಕೆಲವರನ್ನು ರಕ್ಷಣೆ ಮಾಡಲಾಗಿದ್ದು, ಉಳಿದವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.
“ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ ‘ಗರುಡ ಪುರಾಣ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಲವರು ಸೇರಿದ್ದರು. ಈ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಒದಗಿಸಿದ ಏಣಿಯ ಸಹಾಯದಿಂದ ಕೆಲವರು ಕಟ್ಟಡದಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಕೆಲವು ಮಹಿಳೆಯರು ಇನ್ನೂ ಕಟ್ಟಡದೊಳಗೆ ಸಿಲುಕಿಕೊಂಡಿದ್ದು, ಕೆಳಗೆ ಇಳಿಯಲು ಸಾಧ್ಯವಾಗುತ್ತಿಲ್ಲ” ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
“ಬೆಂಕಿ ಅವಘಡದ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು, ಸ್ಥಳೀಯ ಆಡಳಿತ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿಯನ್ನು ನಿಯಂತ್ರಿಸುವುದು ಮತ್ತು ಕಟ್ಟಡದಲ್ಲಿರುವವರನ್ನು ಸುರಕ್ಷಿತವಾಗಿ ಹೊರತರಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಟ್ಟಡವು ಕಿರಿದಾದ ಗಲ್ಲಿಯಲ್ಲಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ” ಎಂದು ಉಜ್ಜಯಿನಿ ಜಿಲ್ಲಾಧಿಕಾರಿ ರೋಷನ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.








