ಪುತ್ತೂರು: ಸುಲಿಗರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಚಿಕ್ಕಮಗಳೂರು ಮಾಗುಂಡಿ ನಿವಾಸಿ ಮಸೂದ್ ಅಲಿಯಾಸ್ ಮಸೂರ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ.
ಜುಲೈ 26 ರಂದು ರಾತ್ರಿ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೌಕ್ರಾಡಿ ಎಂಬಲ್ಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಶಿವಶಂಕರ್ ಶಾಸ್ತ್ರಿ ಎಂಬವರ ಮನೆಗೆ 4 ಜನ ಅಪರಿಚಿತರು ಚಿಕಿತ್ಸೆ ಪಡೆಯುವ ನೆಪದಲ್ಲಿ ಬಂದು ಮನೆಯಲ್ಲಿದ್ದ ಶಿವಶಂಕರ್ ಶಾಸ್ತ್ರಿ ಹಾಗೂ ಅವರ ಪತ್ನಿಯನ್ನು ಕಟ್ಟಿಹಾಕಿ ಚಿನ್ನಾಭರಣ, ನಗದು ಸೇರಿದಂತೆ ಒಟ್ಟು ರೂ 2,35,800 ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ:187/2006 ಕಲಂ:395, 397 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಆರೋಪಿ ಮಸೂದ್ ಸುಲಿಗೆ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಈತನನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ನಂಜುಂಡಯ್ಯ ಮತ್ತು ಪೊಲೀಸ್ ಕಾನ್ಸ್ಟೇಬಲ್ ಮ್ಯಾಥ್ಯು ವರ್ಗಿಸ್ ಅವರು ದಸ್ತಗಿರಿ ಮಾಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.








