ಮಂಗಳೂರು: ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಜಿಲ್ಲೆಯ ಆಹಾರ ಮಳಿಗೆಗಳು, ಹೋಟೆಲ್ಗಳು ಹಾಗೂ ಆಹಾರ ಪೂರೈಕೆ ಕೇಂದ್ರಗಳ ಮೇಲೆ ನಿಗಾ ಇರಿಸುವ ಉದ್ದೇಶದಿಂದ ಸುರತ್ಕಲ್ ವ್ಯಾಪ್ತಿಯಲ್ಲಿ ಐದು ತಂಡಗಳಿಂದ ಏಕಕಾಲದಲ್ಲಿ ದಿಢೀರ್ ತಪಾಸಣೆ ನಡೆಸಲಾಯಿತು.
ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿತ್ತು. ಕಾರ್ಯಾಚರಣೆಯ ವೇಳೆ ಸುರತ್ಕಲ್ನ ಹೋಟೆಲ್, ಮೋರ್ ರಿಟೇಲ್ ಮಳಿಗೆ, ಬ್ಲಿಂಕಿಟ್ ಆನ್ಲೈನ್ ಪ್ಲಾಟ್ಫಾರ್ಮ್ ಹಾಗೂ ಮೆಕ್ಡೊನಾಲ್ಡ್ಸ್ ಸೇರಿದಂತೆ ವಿವಿಧ ಆಹಾರ ಮಳಿಗೆಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇದಲ್ಲದೆ, ಎನ್ಐಟಿಕೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳ ಹಾಸ್ಟೆಲ್ಗಳಿಗೆ ಆಹಾರ ಪೂರೈಸುವ ಅಡುಗೆಮನೆಗಳನ್ನೂ ಅಧಿಕಾರಿಗಳು ತಪಾಸಣೆ ಮಾಡಿದರು.








