ಬೆಂಗಳೂರು : ಕಾಲೇಜು ಪ್ರಾಜೆಕ್ಟ್ ಕೆಲಸದ ನಿಮಿತ್ತ ಕುಣಿಗಲ್ಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಹ್ಯಾಂಡ್ಪೋಸ್ಟ್ ಬಳಿ ನಡೆದಿದೆ. ಬೆಂಗಳೂರಿನ ಸಪ್ತಗಿರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವೈಷ್ಣವಿ (20) ಮತ್ತು ಜಾಹ್ನವಿ (20) ಮೃತ ದುರ್ದೈವಿಗಳು.
ಸಪ್ತಗಿರಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಪ್ರಾಜೆಕ್ಟ್ ಕೆಲಸದ ನಿಮಿತ್ತ ಕಾರಿನಲ್ಲಿ ಕುಣಿಗಲ್ ಕಡೆಗೆ ತೆರಳುತ್ತಿದ್ದರು. ಈ ವೇಳೆ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಹ್ಯಾಂಡ್ಪೋಸ್ಟ್ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಏಕಾಏಕಿ ರಸ್ತೆ ಬದಿಯ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ, ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿ ಜಖಂಗೊಂಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ವೈಷ್ಣವಿ ಮತ್ತು ಜಾಹ್ನವಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ಈ ಭೀಕರ ಅಪಘಾತದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಜೊತೆಗೆ ಕಾರಿನಲ್ಲಿದ್ದ ಇತರ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಾಗೂ ಪೊಲೀಸರು, ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ತಕ್ಷಣವೇ ಸಮೀಪದ ನೆಲಮಂಗಲ ಸರ್ಕಾರಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.








