ಬಂಟ್ವಾಳ: ಮಾರಕಾಸ್ತ್ರ ತೋರಿಸಿ ಬೆದರಿಸಿ ಹಣ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಬಂಧಿತ ಆರೋಪಿಗಳು.
ಮಂಗಳೂರಿನ ಕಣ್ಣೂರಿನ ಸಿಮೆಂಟ್ ಮತ್ತು ಕಬ್ಬಿಣದ ಮಾರಾಟ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಯ್ಯದಿ ಎಂಬವರು, ಕಳೆದ ಆಗಸ್ಟ್ 20ರಂದು ಅಂಗಡಿಗಳಿಂದ ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸಿ ಬೈಕ್ನಲ್ಲಿ ಹಿಂದಿರುಗುತ್ತಿದ್ದರು. ಈ ವೇಳೆ ಬಂಟ್ವಾಳದ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ಎರಡು ಬೈಕ್ಗಳಲ್ಲಿ ಬಂದ ನಾಲ್ವರು ಅಪರಿಚಿತರು ತಲವಾರು ತೋರಿಸಿ ಬೆದರಿಸಿ, ಅವರ ಬಳಿಯಿದ್ದ 8 ಲಕ್ಷದ 35 ಸಾವಿರ ರೂಪಾಯಿ ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದರು.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಮೂವರನ್ನು ನವೆಂಬರ್ 11ರಂದು ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ. ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿ ಬಂಧಿತ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ ವೇಳೆ 2 ಲಕ್ಷದ 1 ಸಾವಿರ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ನಂತರ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿತ ಪ್ರವಿತ್ ರಾಜ್ ಶೆಟ್ಟಿ ಎಂಬಾತನ ಗುರುತು ಪತ್ತೆ ಪರೇಡ್ ನಡೆಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.








