ಮಂಗಳೂರು: ನಗರದ ಹೊರವಲಯದ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತರು ಪ್ರತಿಕ್ರಿಯಿಸಿದ್ದಾರೆ.
ನವೆಂಬರ್ 19ರ ಗುರುವಾರ ಸಂಜೆ ಕಾಲೇಜು ಆವರಣದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಂಬಂಧಿಕರು ಎನ್ನಲಾದ ಕೆಲವರು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಕೆ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಈ ಕೃತ್ಯ ನಡೆದಿದೆ ಎಂಬ ಶಂಕೆಯೂ ವ್ಯಕ್ತವಾಗಿದೆ.
ಕೆಲವು ಯುವಕರು ಸೇರಿಕೊಂಡು ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಿಂದ ಎಳೆದುಕೊಂಡು ಹೋಗಿ ಕಾರಿನಲ್ಲಿ ಕೂರಿಸುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ವ್ಯಾಪಕವಾಗಿ ಹರಿದಾಡುತ್ತಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ವಯಸ್ಕರಾದವರು ತಮ್ಮ ಜೀವನದ ನಿರ್ಧಾರಗಳನ್ನು ಸ್ವತಂತ್ರವಾಗಿ ತೆಗೆದುಕೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ. ಯುವತಿ ತನ್ನ ಇಚ್ಛೆಯಂತೆ ಬದುಕಲು ಅವಕಾಶವಿದೆ. ಆಕೆಯ ಒಪ್ಪಿಗೆಯಿಲ್ಲದೆ ಯಾರಾದರೂ, ಕುಟುಂಬದ ಸದಸ್ಯರೇ ಆಗಿದ್ದರೂ, ಬಲವಂತವಾಗಿ ಕರೆದೊಯ್ದಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ವಿದ್ಯಾರ್ಥಿನಿಯನ್ನು ಕುಟುಂಬಸ್ಥರೇ ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ಎಲ್ಲಿ ಮತ್ತು ಹೇಗೆ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಸಂಪೂರ್ಣ ಹಕ್ಕು ಆಕೆಗಿದೆ. ಘಟನೆ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರೆ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿತ್ತು ಎಂದು ಆಯುಕ್ತರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವ ಮೂಲಕ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಲಾಗುವುದು ಎಂದು ಪೊಲೀಸ್ ಆಯುಕ್ತರು ಭರವಸೆ ನೀಡಿದ್ದಾರೆ








