ಬೆಂಗಳೂರು: ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. 2024ರ ಸೆಪ್ಟೆಂಬರ್ನಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಲು ನ್ಯಾಯಾಲಯ ಅನುಮತಿ ನೀಡಿದೆ. ಇದೇ ವೇಳೆ ಕಾರ್ಯಕ್ರಮ ಆಯೋಜಿಸಿದ್ದ ಮೂವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ರದ್ದುಗೊಳಿಸಿ ರಿಲೀಫ್ ನೀಡಿದೆ.
2024ರ ಸೆಪ್ಟೆಂಬರ್ 21ರಂದು ಗಣೇಶ ಮೂರ್ತಿ ವಿಸರ್ಜನೆಯ ಸಂದರ್ಭದಲ್ಲಿ ಶಹಾಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪ್ರತಾಪ್ ಸಿಂಹ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಆಯೋಜಕರು ಕಾರ್ಯಕ್ರಮಕ್ಕೆ ಪೂರ್ವಾನುಮತಿ ಪಡೆದಿದ್ದರು. ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ನೀಡಿದ ಭಾಷಣದ ವಿರುದ್ಧ ಸೆಪ್ಟೆಂಬರ್ 23ರಂದು ದೂರು ದಾಖಲಾಗಿತ್ತು. ಇದರ ಆಧಾರದಲ್ಲಿ ಶಹಾಪುರ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆಗೆ ಪ್ರಚೋದನೆ) ಮತ್ತು ಸೆಕ್ಷನ್ 299ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು.








