ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಹಾಗೂ ದುರಸ್ತಿಗಾಗಿ ನಿಲ್ಲಿಸಿದ್ದ ಕ್ರೇನ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೆಕ್ಯಾನಿಕ್ ಗಳು ಸೇರಿದಂತೆ ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡು-ಧರ್ಮಸ್ಥಳ ರಸ್ತೆಯ ಕಳ್ಳಿಮಾರ್ ನಲ್ಲಿ ನಡೆದಿದೆ.
ಪುಂಜಾಲಕಟ್ಟೆ ನಿವಾಸಿ ಯು. ಮಹಮ್ಮದ್ ಅವರು ತಮ್ಮ ಮಗಳನ್ನು ಕಾರಿನಲ್ಲಿ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ಕಳ್ಳಿಮಾರ್ ನ ಇಂಜಿನಿಯರಿಂಗ್ ಶಾಪೊಂದರ ಮುಂಭಾಗ ಈ ಅಪಘಾತ ಸಂಭವಿಸಿದೆ.
ಈ ಸಂದರ್ಭ ರಸ್ತೆ ಬದಿಯಲ್ಲಿ ಕಾರೊಂದನ್ನು ನಿಲ್ಲಿಸಲಾಗಿತ್ತು. ಸಮೀಪದಲ್ಲೇ ಕ್ರೇನ್ ವೊಂದನ್ನು ದುರಸ್ತಿಗಾಗಿ ನಿಲ್ಲಿಸಲಾಗಿದ್ದು, ಮಾಧವ ಪಿಟ್ಟಿರ್ ಅವರು ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ಪುನೀತ್ ಸಜೀಪ ಅವರು ಬೈಕ್ ನಲ್ಲಿ ಕುಳಿತು ಅವರೊಂದಿಗೆ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಮಂಗಳೂರಿನತ್ತ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದು, ಬಳಿಕ ಕ್ರೇನ್ ಗೆ ಅಪ್ಪಳಿಸಿದೆ. ಡಿಕ್ಕಿಯ ತೀವ್ರತೆಗೆ ನಿಲ್ಲಿಸಿದ್ದ ಕಾರು ಸುಮಾರು 100 ಮೀಟರ್ ದೂರಕ್ಕೆ ಎಸೆಯಲ್ಪಟ್ಟು ನಿಂತಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ.
ಅಪಘಾತದ ರಭಸಕ್ಕೆ ಕ್ರೇನ್ ದುರಸ್ತಿ ಮಾಡುತ್ತಿದ್ದ ಮಾಧವ ಪಿಟ್ಟಿರ್ ಹಾಗೂ ಬೈಕ್ನಲ್ಲಿದ್ದ ಪುನೀತ್ ಸಜೀಪ ವಾಹನಗಳ ನಡುವೆ ಸಿಲುಕಿಕೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹರಸಾಹಸಪಟ್ಟು ಇಬ್ಬರನ್ನೂ ಹೊರತೆಗೆದಿದ್ದಾರೆ.
ಕಾರು ಚಾಲಕ ಯು. ಮಹಮ್ಮದ್ ಅವರಿಗೂ ಗಾಯಗಳಾಗಿದ್ದು, ಮೂವರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಲಾಗಿದೆ. ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಿದರು. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








