ಮಂಗಳೂರು: ಪಾಂಗಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ವಿಚಾರಣೆಗೆ ಮಹೇಶ್ ಶೆಟ್ಟಿ ತಿಮರೋಡಿ ಹಾಜರಾಗಿದ್ದಾರೆ. ಎಸ್ಐಟಿ ಅಧಿಕಾರಿಗಳು ನೀಡಿದ್ದ ನೋಟಿಸ್ನ ಹಿನ್ನೆಲೆಯಲ್ಲಿ ಅವರು ಅಗತ್ಯ ದಾಖಲೆಗಳೊಂದಿಗೆ ವಿಚಾರಣೆಗೆ ಆಗಮಿಸಿದ್ದರು.
ವಿಚಾರಣೆ ಮುಗಿಸಿ ಹೊರಬಂದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ತಿಮರೋಡಿ, ತನಿಖೆ ಪ್ರಗತಿಯಲ್ಲಿರುವುದರಿಂದ ಅಧಿಕಾರಿಗಳು ಯಾವ ವಿಚಾರಗಳನ್ನು ಕೇಳಿದ್ದಾರೆ ಹಾಗೂ ತಾವು ಯಾವ ಮಾಹಿತಿಯನ್ನು ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ತನಿಖೆಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳು ಹಾಗೂ ಪೆನ್ಡ್ರೈವ್ಗಳನ್ನು ಎಸ್ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಿರುವುದಾಗಿ ಹೇಳಿದ್ದಾರೆ.
ಸೌಜನ್ಯ ಪ್ರಕರಣ ನಡೆದು ಈಗಾಗಲೇ 14 ವರ್ಷಗಳು ಕಳೆದಿವೆ. ಇಂತಹ ದೀರ್ಘಕಾಲದ ಪ್ರಕರಣದ ತನಿಖೆಯನ್ನು ಕೇವಲ ಮೂರು ತಿಂಗಳೊಳಗೆ ಪೂರ್ಣಗೊಳಿಸುವುದು ಹೇಗೆ ಸಾಧ್ಯ ಎಂಬ ಪ್ರಶ್ನೆಯೂ ಇದೆ. ನ್ಯಾಯಾಲಯದ ಸೂಚನೆಯಂತೆ ತನಿಖಾಧಿಕಾರಿಗಳು ಅದಕ್ಕೆ ಪೂರಕವಾಗಿ ಪ್ರಯತ್ನ ನಡೆಸುತ್ತಿದ್ದಾರೆ. ತನಿಖೆಗೆ ತಮ್ಮಿಂದ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಮಹೇಶ್ ಶೆಟ್ಟಿ ತಿಮರೋಡಿ ತಿಳಿಸಿದ್ದಾರೆ.








