ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದ ಜಿಲ್ಲಾಧಿಕಾರಿಗಳು ಜುಲೈ 2ರಂದು ಅಂಗನವಾಡಿ ಕೇಂದ್ರಗಳಿಂದ ಹಿಡಿದು ಪದವಿಪೂರ್ವ ಕಾಲೇಜುಗಳವರೆಗೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.
ಇದರ ನಡುವೆಯೇ ಕೆಲವು ಖಾಸಗಿ ಶಾಲೆ ಹಾಗೂ ಕಾಲೇಜುಗಳು ಜು.2ರಂದು ಎಂದಿನಂತೆ ತರಗತಿಗಳನ್ನು ನಡೆಸಲಿವೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿಗಳು, ಜಿಲ್ಲಾಡಳಿತದ ರಜೆ ಆದೇಶವನ್ನು ಎಲ್ಲ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
ಸರ್ಕಾರದ ನಿರ್ದೇಶನವನ್ನು ಉಲ್ಲಂಘಿಸಿ ಯಾವುದೇ ಶಾಲೆ ಅಥವಾ ಕಾಲೇಜು ತರಗತಿಗಳನ್ನು ನಡೆಸಿದರೆ ಸಂಬಂಧಿತ ಸಂಸ್ಥೆಗಳ ವಿರುದ್ಧ ಕಾನೂನುಬದ್ಧ ಹಾಗೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಜೆ ಘೋಷಿಸಲಾಗಿರುವುದರಿಂದ ಶಿಕ್ಷಣ ಸಂಸ್ಥೆಗಳು ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.








