ಬೆಂಗಳೂರು: ಶಿವಾಜಿನಗರದಲ್ಲಿ ಗೇಟರ್ ಬೆಂಗಳೂರು ಪ್ರಾಧಿಕಾರ ವತಿಯಿಂದ ಮಂಗಳವಾರ ನಡೆದ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಜೆಸಿಬಿ ಬಳಸಿ ಅತಿಕ್ರಮಣ ತೆರವುಗೊಳಿಸಲು ಮುಂದಾದ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ವೇಳೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕ್ಷಮೆಯಾಚನೆಯ ವೀಡಿಯೋ ಹಂಚಿಕೊಂಡಿದ್ದಾರೆ.
ಕಾರ್ಯಾಚರಣೆಗೆ ಅಡ್ಡಿಪಡಿಸಿದ ಪ್ರತಿಭಟನಾಕಾರರು ಪಾಲಿಕೆಯ ಇಂಜಿನಿಯರ್‌ಗಳು, ಜೆಸಿಬಿ ಚಾಲಕ ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಒಬ್ಬ ಸಿಬ್ಬಂದಿಗೆ ಹೆಲ್ಮೆಟ್‌ನಿಂದ ಹೊಡೆಯಲು ಯತ್ನಿಸಿದ್ದು ಮಾತ್ರವಲ್ಲದೆ, ಚಾಲಕನ ಕಣ್ಣಿಗೆ ಪೆಪ್ಪರ್ ಸ್ಪ್ರೇ ಸಿಂಪಡಿಸಿ ಉದ್ಧಟತನ ಮೆರೆದಿದ್ದಾರೆ. ಇದರಿಂದಾಗಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಇವರು ಜೀವನೋಪಾಯಕ್ಕೆ ಕಷ್ಟಪಡುವ ಬಡವರಲ್ಲ, ಸಮಾಜಘಾತುಕ ಶಕ್ತಿಗಳು. ಕರ್ತವ್ಯನಿರತ ಅಧಿಕಾರಿಗಳ ಮೇಲೆ ಕೈಮಾಡಿದ ಯಾರನ್ನೂ ಬಿಡುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಮಾಧವ ರಾವ್ ನೀಡಿದ ದೂರಿನನ್ವಯ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, 7 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಇನ್ನೊಂದೆಡೆ, ಬೆಂಗಳೂರು ನಗರ ಪೊಲೀಸರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಬಂಧಿತ ಆರೋಪಿಗಳು “ನಾವು ಮಾಡಿದ್ದು ತಪ್ಪು, ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ” ಎಂದು ಕೈಮುಗಿದು ಸಾರ್ವಜನಿಕರಲ್ಲಿ ಕ್ಷಮೆಯಾಚಿಸುತ್ತಿರುವುದು ಕಂಡುಬಂದಿದೆ.








