ಉಡುಪಿ: ವ್ಯಕ್ತಿಯೊಬ್ಬರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಕುಂದಾಪುರ ಚರ್ಚ್ ರಸ್ತೆಯಲ್ಲಿರುವ ಹೋಲಿ ರೋಸರಿ ಚರ್ಚ್ ಎದುರು ನಡೆದಿದೆ.
ಬಾರ್ಕೂರು ಕಚೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನಸ್ (45) ಮೃತರು. ಅವರು ಹಣಕಾಸು ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಐವನ್ ಅವರು ಶುಕ್ರವಾರ ಮುಂಜಾನೆ ಮಹಿಳೆಯೊಬ್ಬರೊಂದಿಗೆ ಕಾರಿನಲ್ಲಿ ಚರ್ಚ್ ರಸ್ತೆಗೆ ಬಂದಿದ್ದ ವೇಳೆ, ಆರೋಪಿ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಗುಂಡೇಟಿನಿಂದ ತೀವ್ರ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟರು.
ಘಟನೆಯ ವೇಳೆ ಕಾರಿನಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿರುವುದಾಗಿ ತಿಳಿದುಬಂದಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಹಣಕಾಸು ಅಥವಾ ಇತರೆ ವೈಯಕ್ತಿಕ ವ್ಯವಹಾರಕ್ಕೆ ಸಂಬಂಧಿಸಿದ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಹೆಚ್ಚುವರಿ ಎಸ್‌ಪಿ ಸುಧಾಕರ್ ನಾಯಕ್, ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆ ಇನ್‌ಸ್ಪೆಕ್ಟರ್ ಜಯರಾಮ ಗೌಡ ಹಾಗೂ ಪಿಎಸ್‌ಐಗಳಾದ ನಂಜಾ ನಾಯ್ಕ, ಪುಷ್ಪಾ ಮತ್ತು ಅನೂಪ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಕುಂದಾಪುರ ನಗರ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.








