ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ವಲಸೆ ಕಾರ್ಮಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.
ಕೆಲ್ಲಂ ಪ್ರದೇಶದಲ್ಲಿ ಅಪರಿಚಿತ ಉಗ್ರರು ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಗಾಯಗೊಂಡಿದ್ದ ಓರ್ವ ಕಾರ್ಮಿಕ ಶುಕ್ರವಾರ ಮೃತಪಟ್ಟಿದ್ದರು. ಇದೀಗ ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳುಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದಾಳಿಯ ವೇಳೆ ಕಾರ್ಮಿಕರು ಕೆಲ್ಲಂನಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದರು. ಗುಂಡಿನ ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆಯ ಅಂಗಸಂಸ್ಥೆಯೆಂದು ಪರಿಗಣಿಸಲ್ಪಡುವ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಘಟನೆಯ ಬಳಿಕ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದು, ಉಗ್ರರ ಪತ್ತೆಗೆ ವ್ಯಾಪಕ ಶೋಧ ಆರಂಭಿಸಿವೆ.








