ಉಡುಪಿ: ಚಲಿಸುತ್ತಿದ್ದ ಇಲೆಕ್ಟ್ರಿಕ್ ಸ್ಕೂಟರ್ ಒಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ರಸ್ತೆ ಮಧ್ಯೆಯೇ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ ನಡೆದಿದೆ. ಸವಾರ ಸಮಯಪ್ರಜ್ಞೆ ಮೆರೆದಿದ್ದರಿಂದ ಭಾರೀ ಅಪಾಯವೊಂದು ತಪ್ಪಿದೆ.
ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ವಾಹನದಿಂದ ದಿಢೀರನೆ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿ ಆತಂಕಗೊಂಡ ಸವಾರ ತಕ್ಷಣವೇ ರಸ್ತೆ ಮಧ್ಯೆಯೇ ಸ್ಕೂಟರ್ ನಿಲ್ಲಿಸಿ, ದೂರ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.
ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಗಮನಿಸಿದ ಸ್ಥಳೀಯರು ತಕ್ಷಣವೇ ನೀರು ಸುರಿದು ಬೆಂಕಿಯನ್ನು ನಂದಿಸಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಸ್ಕೂಟರ್‌ನ ಹೆಚ್ಚಿನ ಭಾಗ ಬೆಂಕಿಗಾಹುತಿಯಾಗಿತ್ತು.
ಇಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ಅಥವಾ ತಾಂತ್ರಿಕ ದೋಷದಿಂದ ಈ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.








