ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಲವು ಪ್ರಮುಖ ಸಚಿವರನ್ನು ಗುರಿಯಾಗಿಸಿಕೊಂಡು ರಹಸ್ಯ ಸ್ಟಿಂಗ್ ಆಪರೇಷನ್ ನಡೆಸಲು ಖಾಸಗಿ ಏಜೆನ್ಸಿಗಳ ಮೂಲಕ ಪ್ರಯತ್ನ ನಡೆಯುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸಚಿವರಿಗೆ ಮಾಹಿತಿ ನೀಡಿರುವ ಡಿಕೆ ಶಿವಕುಮಾರ್, ಎರಡು ತಂಡಗಳು ಸಚಿವರ ಚಲನವಲನದ ಮೇಲೆ ನಿಗಾ ಇಡುತ್ತಿದ್ದು, ರಹಸ್ಯವಾಗಿ ಸ್ಟಿಂಗ್ ಆಪರೇಷನ್ ನಡೆಸುವ ಸಾಧ್ಯತೆಯಿದೆ. ಹೀಗಾಗಿ ಸಚಿವರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.
ಸಚಿವರ ವೈಯಕ್ತಿಕ ಭೇಟಿಗಳು, ಸಾರ್ವಜನಿಕರೊಂದಿಗೆ ನಡೆಸುವ ಸಂವಾದಗಳು ಹಾಗೂ ದೈನಂದಿನ ಚಟುವಟಿಕೆಗಳನ್ನು ಗಮನಿಸಿ ಅವುಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂಬ ಮಾಹಿತಿ ಗುಪ್ತಚರ ಇಲಾಖೆಯಿಂದ ಲಭಿಸಿದೆ ಎಂದು ಸಿಎಂ ಸಭೆಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟವು ಖಾಸಗಿ ಏಜೆನ್ಸಿಗಳ ನೆರವಿನಿಂದ ಸರ್ಕಾರದ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿರುವುದಾಗಿ ವರದಿಯಾಗಿದೆ. ಸಚಿವರು ಯಾರನ್ನು ಭೇಟಿಯಾಗುತ್ತಾರೆ, ಎಲ್ಲಿಗೆ ತೆರಳುತ್ತಾರೆ ಎಂಬುದನ್ನು ದಾಖಲಿಸಿಕೊಂಡು ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಐವರು ಸಚಿವರಿಗೆ ಸಿಎಂ ಪ್ರತ್ಯೇಕವಾಗಿ ಎಚ್ಚರಿಕೆ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಸಂಪುಟ ಸಭೆಯಲ್ಲಿ ಸಾಮಾನ್ಯವಾಗಿ ಸೂಚನೆ ನೀಡಿದ ಬಳಿಕ, ಆ ಐವರು ಸಚಿವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿ ಮುನ್ನೆಚ್ಚರಿಕೆ ವಹಿಸುವಂತೆ ಡಿಕೆ ಶಿವಕುಮಾರ್ ಕಿವಿಮಾತು ಹೇಳಿದ್ದಾರೆ ಎಂದು ವರದಿಯಾಗಿದೆ.
ಆದರೆ ಸಿಎಂ ಪ್ರತ್ಯೇಕವಾಗಿ ಮಾತುಕತೆ ನಡೆಸಿದ ಐವರು ಸಚಿವರು ಯಾರು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಸಚಿವರು ತಮ್ಮ ನಡೆ-ನುಡಿ ಹಾಗೂ ಸಂಭಾಷಣೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂಬ ಮುಖ್ಯಮಂತ್ರಿಯ ಸೂಚನೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.








