ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಕೆಡಿಸಿ, ರಾಜಕೀಯವಾಗಿ ತೇಜೋವಧೆ ಮಾಡಲು ಬ್ಲ್ಯಾಕ್ಮೇಲ್ ಯತ್ನ ನಡೆದಿದ್ದು, ಈ ಪ್ರಚಲಿತ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರೇ ಭಾಗಿಯಾಗಿದ್ದಾರೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಪತ್ರಕರ್ತ ಸೇರಿದಂತೆ ಇಬ್ಬರನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೂ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಸ್ಟಿಂಗ್ ವಿಡಿಯೋ ಕುರಿತು ಸುದೀರ್ಘವಾಗಿ ಮಾತನಾಡಿದ ಯತೀಂದ್ರ, “ಸಿದ್ದರಾಮಯ್ಯ ಅವರ 40 ವರ್ಷಗಳ ಕಳಂಕವಿಲ್ಲದ ರಾಜಕೀಯ ಜೀವನಕ್ಕೆ ಕಪ್ಪುಚುಕ್ಕೆ ತರಲು ಹಾಗೂ ಬ್ಲ್ಯಾಕ್ಮೇಲ್ ಮಾಡುವ ದುರುದ್ದೇಶದಿಂದ ಈ ಕೃತ್ಯ ಎಸಗಲಾಗಿದೆ. ವಿಡಿಯೋದಲ್ಲಿ ಮೇಲ್ನೋಟಕ್ಕೆ ನಮ್ಮ ಪಕ್ಷದವರೇ ಭಾಗಿಯಾಗಿರುವುದು ಕಂಡುಬರುತ್ತಿದೆ. ಕಾಂಗ್ರೆಸ್ನ ಓರ್ವ ಮಹಿಳೆ ಹಾಗೂ ಮಾಧ್ಯಮ ಸಂಸ್ಥೆಯೊಂದರ ಮುಖ್ಯಸ್ಥರು ಇದರಲ್ಲಿ ಕಾಣಿಸಿಕೊಂಡಿದ್ದಾರೆ” ಎಂದರು.
ಇದಲ್ಲದೆ, “ವಿಡಿಯೋದಲ್ಲಿರುವ ಮಹಿಳೆಯು ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು ಎಂಬ ಮಾಹಿತಿ ಇದೆ. ಚುನಾವಣಾ ಟಿಕೆಟ್ಗಾಗಿ ಮತ್ತು ರಾಜಕೀಯ ಲಾಭಕ್ಕಾಗಿ ಈ ರೀತಿ ಬ್ಲ್ಯಾಕ್ಮೇಲ್ ಮಾಡಲು ಯತ್ನಿಸಿದ್ದಾರೆ. ಆದರೆ ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಪಕ್ಷವನ್ನು ದೂಷಿಸಲು ಸಾಧ್ಯವಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.
ಈ ಘಟನೆಯಿಂದ ತಂದೆಯವರು ಅತ್ಯಂತ ಬೇಸರಗೊಂಡಿದ್ದಾರೆ ಎಂದು ತಿಳಿಸಿದ ಯತೀಂದ್ರ, “ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇರಲಿ ಅಥವಾ ಬೇರೆಯವರೇ ಇರಲಿ, ತಪ್ಪಿತಸ್ಥರು ಯಾರೇ ಆಗಿದ್ದರೂ ತಕ್ಷಣ ಬಂಧಿಸುವಂತೆ ತಂದೆಯವರು (ಸಿದ್ದರಾಮಯ್ಯ) ಸೂಚಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸರ್ಕಾರದ ತನಿಖೆಯ ಮೇಲೆ ನಮಗೆ ಸಂಪೂರ್ಣ ನಂಬಿಕೆಯಿದೆ. ಒಂದು ವೇಳೆ ತನಿಖೆ ಸರಿಯಾಗಿ ನಡೆಯದಿದ್ದರೆ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುತ್ತೇವೆ. ಅಂತಿಮವಾಗಿ ಸತ್ಯವೇ ಗೆಲ್ಲಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.








