ಹೈದರಾಬಾದ್: ತೆಲಂಗಾಣದಲ್ಲಿ ಸಂಭವಿಸಿದ ರಸ್ತೆ ಅಪಘಾತ ಆತಂಕ ಮೂಡಿಸಿದೆ. ಹೈದರಾಬಾದ್ನಲ್ಲಿ 17 ಜನರನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾ ಟ್ರಕ್ಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ತೆಲಂಗಾಣದ ಹೈದರಾಬಾದ್ ಜಿಲ್ಲೆಯ ಹಿಮಾಯತ್ ಸಾಗರ್ ಸಮೀಪದ ಹೊರ ವರ್ತುಲ ರಸ್ತೆಯಲ್ಲಿ ಭಾನುವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. ಕೊತ್ತೂರು ಬಳಿ ನಡೆದ ಕಾರ್ಯಕ್ರಮವೊಂದರಲ್ಲಿ ಕೆಲಸ ಮುಗಿಸಿಕೊಂಡು ಹಿಂದಿರುಗುತ್ತಿದ್ದವರು ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು.
ರಾಜೇಂದ್ರನಗರ ಪೊಲೀಸರ ಮಾಹಿತಿ ಪ್ರಕಾರ, ಬೆಳಗಿನ ಜಾವ ಸುಮಾರು 12.45ಕ್ಕೆ 17 ಜನರನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಉಳಿದ 14 ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಆಟೋದಲ್ಲಿ ನಿಗದಿಗಿಂತ ಹೆಚ್ಚು ಜನರನ್ನು ಕರೆದೊಯ್ಯಲಾಗಿತ್ತೇ? ಅಪಘಾತಕ್ಕೆ ಚಾಲಕರ ನಿರ್ಲಕ್ಷ್ಯ ಕಾರಣವೇ ಅಥವಾ ಬೇರೆ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಪೊಲೀಸರ ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.








