ಹಾವೇರಿ: ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ನಾಲ್ವರು ಹೆಡ್ಕಾನ್ಸ್ಟೆಬಲ್ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಓರ್ವ ಸಿಪಿಐ ಹಾಗೂ ಇಬ್ಬರು ಪಿಎಸ್ಐಗಳ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಹಾವೇರಿ ಎಸ್ಪಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ
ಹಾವೇರಿ ಜಿಲ್ಲೆಯಲ್ಲಿ ನಡೆದ VAO ಪರೀಕ್ಷೆಯಲ್ಲಿ ಹಾನಗಲ್ ಮೂಲದ ಶಂಕರ್ ಬನ್ನೂರು ಎಂಬಾತ ಮೊಬೈಲ್ ಬಳಸಿ ಪರೀಕ್ಷೆ ಬರೆದು 151 ಅಂಕ ಗಳಿಸಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಈಗಾಗಲೇ ಶಂಕರ್ ಬನ್ನೂರು ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೊಬೈಲ್ ಕರೆಗಳ ವಿವರ ಪರಿಶೀಲಿಸಿ, ಪರೀಕ್ಷೆ ವೇಳೆ ಆತ ಯಾರೊಂದಿಗೆ ಸಂಪರ್ಕದಲ್ಲಿದ್ದ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
ಈ ಪ್ರಕರಣದ ತನಿಖೆಯನ್ನು ಹಾವೇರಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು, ಶಂಕರ್ ಬನ್ನೂರು ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ತೆಗೆದುಕೊಂಡು ಹೋಗಿದ್ದು ಹೇಗೆ? ಭದ್ರತಾ ಸಿಬ್ಬಂದಿ ಮತ್ತು ಪರೀಕ್ಷಾ ಮೇಲ್ವಿಚಾರಕರಿಂದ ಲೋಪವಾಗಿದೆಯೇ ಎಂಬ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.
ನಾಲ್ವರು ಸಿಬ್ಬಂದಿಗೆ ನೋಟಿಸ್
ಇನ್ನೊಂದೆಡೆ, ಕರ್ತವ್ಯ ಲೋಪದ ಆರೋಪದ ಮೇಲೆ ಹೆಡ್ಕಾನ್ಸ್ಟೆಬಲ್ಗಳಾದ ಮರೆಣ್ಣವರ, ಹೊನ್ನಾಳಿ, ಮಣಕವಾಡ ಮತ್ತು ನಾಗನೂರು ಅವರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ, ಪರೀಕ್ಷಾ ಕರ್ತವ್ಯದಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆಯ ನಾಲ್ವರು ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.
ಪರೀಕ್ಷಾ ಕೇಂದ್ರದ ಮುಖ್ಯಸ್ಥ ರಮಾಕಾಂತ್ ಭಟ್, ಕೊಠಡಿ ಮೇಲ್ವಿಚಾರಕ ಬಸವರಾಜ ಸವದಿ, ಡ್ರೆಸ್ಕೋಡ್ ಅಧಿಕಾರಿ ರಾಜು ದುಂಡಪ್ಪನವರ ಹಾಗೂ ಪರೀಕ್ಷಾ ವೀಕ್ಷಕ ಶಿವಣ್ಣ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಸಂಬಂಧಪಟ್ಟ ಸಂಸ್ಥೆಗೆ ಪತ್ರ ಬರೆಯಲಾಗಿದೆ.
ಎಸ್ಪಿ ಪ್ರತಿಕ್ರಿಯೆ
VAO ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಶಂಕರ್ ಬನ್ನೂರು ಪರೀಕ್ಷೆಯನ್ನೇ ಬರೆದಿಲ್ಲ ಎಂಬ ಮತ್ತೊಬ್ಬ ಅಭ್ಯರ್ಥಿ ಸತೀಶ್ ಲಮಾಣಿ ಹೇಳಿಕೆಗೆ ಹಾವೇರಿ ಎಸ್ಪಿ ಯಶೋಧಾ ವಂಟಗೋಡಿ ಪ್ರತಿಕ್ರಿಯಿಸಿದ್ದಾರೆ. ಜಿಲ್ಲಾಡಳಿತ ಈಗಾಗಲೇ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದರೂ ಮತ್ತೆ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಸರಿಯಲ್ಲ ಎಂದಿದ್ದಾರೆ. ಈ ಸಂಬಂಧ ಸತೀಶ್ ಲಮಾಣಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯಲಾಗುವುದು. ಶಂಕರ್ ಬನ್ನೂರು ಪರೀಕ್ಷೆ ಬರೆದಿಲ್ಲ ಎನ್ನುವುದಕ್ಕೆ ಅವರ ಬಳಿ ಸೂಕ್ತ ದಾಖಲೆಗಳಿದ್ದರೆ ಸಲ್ಲಿಸಲಿ. ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡುವಂತಿಲ್ಲ. ಸುಳ್ಳು ಸುದ್ದಿಗಳನ್ನು ಹರಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಮುಖ್ಯಮಂತ್ರಿಗಳೂ ಸೂಚನೆ ನೀಡಿದ್ದಾರೆ ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.








