ಉಡುಪಿ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ಗಂಭೀರ ದೌರ್ಜನ್ಯದ ಆರೋಪ ಕೇಳಿಬಂದಿದೆ. ಸಾರ್ವಜನಿಕ ರಸ್ತೆಯಲ್ಲಿ ಯಾರೋ ಕಿಡಿಗೇಡಿಗಳು ಮಾಡಿದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗೆ ನುಗ್ಗಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಮಣಿಪಾಲದ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದು, ಪ್ರಕರಣದಲ್ಲಿ ತಕ್ಷಣ ಮಧ್ಯಪ್ರವೇಶಿಸಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.
ಕಳೆದ ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯವೊಂದರ ಕೊಠಡಿಗಳಿಗೆ ನುಗ್ಗಿದ ಪೊಲೀಸ್ ಸಿಬ್ಬಂದಿ, ಪರೀಕ್ಷಾ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಎಲ್ಲರೆದುರೇ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಪೊಲೀಸರು ಥಳಿಸುತ್ತಿರುವ ದೃಶ್ಯಗಳು ಅಪಾರ್ಟ್ಮೆಂಟ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಅಲ್ಲದೆ, ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದು ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಸಬ್ ಇನ್ಸ್ಪೆಕ್ಟರ್ (PSI) ಅಮಾಯಕ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ, ಸುಳ್ಳು ವಿವರಗಳೊಂದಿಗೆ ಎಫ್ಐಆರ್ ದಾಖಲಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ತಮ್ಮ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ‘‘ನಾವು ನವೆಂಬರ್ 8ರಂದು ನಮ್ಮ ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ನವೆಂಬರ್ 10ರಂದು ಪೊಲೀಸರು ಕೊಠಡಿಗಳಿಗೆ ನುಗ್ಗಿ ಹಲ್ಲೆ ನಡೆಸಿ, ದಿನವಿಡೀ ಠಾಣೆಯಲ್ಲಿರಿಸಿ ನಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಎಂಜಿನಿಯರಿಂಗ್ ಪರೀಕ್ಷಾ ಸಮಯದಲ್ಲಿ ಯಾರೋ ಮಾಡಿದ ತಪ್ಪಿಗೆ ನಮ್ಮ ಮೇಲೆ ಪ್ರಕರಣ ದಾಖಲಿಸಿರುವುದು ತೀವ್ರ ಆತಂಕ ತಂದಿದೆ. ದಯವಿಟ್ಟು ಮಧ್ಯಪ್ರವೇಶಿಸಿ ನ್ಯಾಯ ಒದಗಿಸಿ’’ ಎಂದು ಸಿಎಂಗೆ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ಆರೋಪಗಳ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣಕ್ಕೆ ಅನ್ವಯಿಸಲಾದ ಕಾನೂನು ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್ಐಆರ್ ದಾಖಲಿಸಲು ಸಾಧ್ಯವಿಲ್ಲದ ಕಾರಣ, ನ್ಯಾಯಾಲಯದ ಅನುಮತಿ ಪಡೆದೇ ಪ್ರಕರಣ ದಾಖಲಿಸಲಾಗಿದೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ವಿಡಿಯೋ ದಾಖಲೆ ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಬಗ್ಗೆ ತನಿಖೆ ನಡೆಸಲು ಉಡುಪಿ ಡಿವೈಎಸ್ಪಿ (DySP) ಅವರಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಕರಣದಲ್ಲಿ ಇದುವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ (Chargesheet) ಸಲ್ಲಿಸಿಲ್ಲ. ಮಣಿಪಾಲ ಠಾಣೆಯ ಪಿಎಸ್ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಮನವಿ ಸ್ವೀಕರಿಸಿದ ದಿನವೇ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.








