ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಇನ್ನೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಧರ್ಮಸ್ಥಳದ ಧನಕೀರ್ತಿ ಅರಿಗ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ನ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ. ಅರ್ಜಿದಾರರ ಪರ ವಕೀಲ ಮನಮೋಹನ್ ಪಿ.ಎನ್. ಅವರು ವಾದ ಮಂಡಿಸಿ, ತಿಮರೋಡಿ ವಿರುದ್ಧ ಈಗಾಗಲೇ ಗಡೀಪಾರು ಆದೇಶ ಹೊರಡಿಸಲಾಗಿದೆ. ಆದರೆ ಆ ಆದೇಶವನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಅದನ್ನು ಕಾರ್ಯಗತಗೊಳಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ), ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಡಿವೈಎಸ್ಪಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲರು ನೋಟಿಸ್ ಸ್ವೀಕರಿಸಿದ್ದಾರೆ.
ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆಯನ್ನು ಮೂರು ದಿನಗಳೊಳಗೆ ಪೂರ್ಣಗೊಳಿಸುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಿದೆ. ಅಲ್ಲದೆ, ನೋಟಿಸ್ಗೆ ಉತ್ತರ ಸಲ್ಲಿಸಲು ಡಿಸೆಂಬರ್ 16ರವರೆಗೆ ಕಾಲಾವಕಾಶ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನೂ ಅದೇ ದಿನಕ್ಕೆ ನಿಗದಿಪಡಿಸಿದೆ.








