ವಿಟ್ಲ: ಕನ್ಯಾನ ಗ್ರಾಮದ ಗ್ರಾಮ ಆಡಳಿತಾಧಿಕಾರಿಗೆ ಕಚೇರಿಯಲ್ಲೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿ ಜೀವಬೆದರಿಕೆ ಹಾಕಿದ ಘಟನೆ ನವೆಂಬರ್ 23ರಂದು ನಡೆದಿದೆ.
ಕನ್ಯಾನ ಗ್ರಾಮದ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅನಿಲ್ ಕುಮಾರ್ (35) ಅವರು ಸೋಮವಾರ ಅಪರಾಹ್ನ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ವೇಳೆ, ಕನ್ಯಾನ ಗ್ರಾಮದ ಪನೆಯಡ್ಕ ನಿವಾಸಿ ಮಹಮ್ಮದ್ ಇಸ್ಮಾಯಿಲ್ ಎಂಬಾತ ಕಚೇರಿಗೆ ಆಗಮಿಸಿದ್ದಾನೆ.
ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದ ಆತ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ಹಲ್ಲೆ ನಡೆಸಲು ಮುಂದಾಗಿ ಜೀವಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಅನಿಲ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 243/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 132, 352 ಹಾಗೂ 351(2)ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.








