ಕುಂದಾಪುರ : ಗಣೇಶ ಚತುರ್ಥಿಯಂದು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಜಂಗುಳಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದ ತಮಿಳುನಾಡು ಮೂಲದ ಮೂವರು ಕಳ್ಳಿಯರನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದು, ಕಳವು ಮಾಡಿದ್ದ ₹2 ಲಕ್ಷ ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ತಮಿಳುನಾಡು ಮೂಲದ ವಲ್ಲಿಯಮ್ಮ, ದೇವಿ ಯಾನೆ ತಿಲೋತ್ತಮ ಹಾಗೂ ಪೊನ್ನಿ ಬಂಧಿತ ಆರೋಪಿಗಳು.
ಕಳೆದ ಸೆಪ್ಟೆಂಬರ್ 14ರಂದು ಗಣೇಶ ಚತುರ್ಥಿಯ ದಿನ ಬೈಂದೂರು ತಾಲ್ಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಎಂಬುವವರು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಬರುತ್ತಿದ್ದರು. ಈ ವೇಳೆ ಜನಜಂಗುಳಿಯ ಲಾಭ ಪಡೆದ ಕಳ್ಳಿಯರು, ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದರು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿದ್ದ ಕುಂದಾಪುರ ಪೊಲೀಸರಿಗೆ, ಈ ಕೃತ್ಯದಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿಯಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಹೇಳಲಾಗಿದೆ.
ಕುಂದಾಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ಕುಂದಾಪುರ ಠಾಣಾ ಪೊಲೀಸ್ ನಿರೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು, ಮಾನಂತವಾಡಿ ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ತೀವ್ರ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಆರೋಪಿಗಳು ಸುಲಿಗೆ ಮಾಡಿದ್ದ ಸುಮಾರು ₹2 ಲಕ್ಷ ಮೌಲ್ಯದ 15.340 ಗ್ರಾಂ ತೂಕದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕುಂದಾಪುರ ಪೊಲೀಸ್ ಠಾಣೆಯ ಪಿ.ಎಸ್.ಐ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.








