ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ–ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಸಂಚಾರದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ ಮೂಲಕ ಸೆಪ್ಟೆಂಬರ್ 30ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ.
ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ–ನಗರ–ಕುಂದಾಪುರ ಹಾಗೂ ಉಡುಪಿ ಮಾರ್ಗವಾಗಿ ಸಂಚರಿಸಬೇಕು. ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬರುವ ಭಾರಿ ವಾಹನಗಳು ಬಾಳೆಹೊನ್ನೂರು–ಮಾಗುಂಡಿ–ಕಳಸ–ಕುದುರೆಮುಖ–ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸಬೇಕು.
ನರಸಿಂಹರಾಜಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕೊಪ್ಪ–ಜಯಪುರ–ಬಾಳೆಹೊಳೆ–ಕಳಸ–ಕುದುರೆಮುಖ–ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.








