ಪುತ್ತೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ದಿನಾಂಕ 25.06.2026 ರಂದು ಸಂಜೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸುಷ್ಮಾ ಜಿ. ಭಂಡಾರಿ ಅವರಿಗೆ ಮಾಹಿತಿ ದೊರಕಿದ್ದು, ಮಾಹಿತಿ ಆಧರಿಸಿ ಅವರು ಸಿಬ್ಬಂದಿಗಳೊಂದಿಗೆ ಪುತ್ತೂರು ಆರ್ಯಾಪು ಗ್ರಾಮದ ಮರಕ್ಕ ಎಂಬಲ್ಲಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ KA 21 5450 ನೋಂದಣಿಯ ಪಿಕ್‌ಅಪ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ, ಒಂದು ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿರುವುದು ಕಂಡುಬಂದಿದೆ. ವಾಹನದ ಚಾಲಕ ನಾರಾಯಣ ಹಾಗೂ ಸಹಪ್ರಯಾಣಿಕ ಮೊಯ್ದುಕುಂಞ ಅವರನ್ನು ವಿಚಾರಿಸಿದಾಗ, ಜಾನುವಾರು ಸಾಗಾಟಕ್ಕೆ ಸಂಬಂಧಿಸಿದ ಯಾವುದೇ ಅನುಮತಿ ಹಾಗೂ ಅಗತ್ಯ ದಾಖಲೆಗಳು ಅವರ ಬಳಿ ಇರಲಿಲ್ಲ ಎಂದು ತಿಳಿದುಬಂದಿದೆ.
ಬಳಿಕ ಪೊಲೀಸರು ಜಾನುವಾರು ಹಾಗೂ ವಾಹನವನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಆರೋಪಿಗಳ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 95-2026, ಕಲಂ: 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯ್ದೆ 1960 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.








