ಮಂಗಳೂರು:ವೃದ್ಧ ಮಹಿಳೆಯ ಕುತ್ತಿಗೆಯಿಂದ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಪ್ರಕರಣವನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೋರ್ವ ಆರೋಪಿ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದಾನೆ.
ಜೂನ್ 14ರಂದು ಮಧ್ಯಾಹ್ನ ಸುಮಾರು 12.30ರ ವೇಳೆಗೆ ಮಂಗಳೂರು ನಗರದ ಸೂಟರ್ಪೇಟೆಗೆ ತೆರಳುತ್ತಿದ್ದ ಮಹಿಳೆಯೊಬ್ಬರು ಎಕ್ಕೂರು ಬಸ್ ನಿಲ್ದಾಣದಿಂದ ಇಳಿದು ಸೂಟರ್ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಬಳಿ ಬಂದು, ಏಕಾಏಕಿ ಆಕೆಯ ಕುತ್ತಿಗೆಯಲ್ಲಿದ್ದ ಸುಮಾರು 12 ಗ್ರಾಂ ತೂಕದ ಲಕ್ಷ್ಮಿ ಪೆಂಡೆಂಟ್ ಹೊಂದಿರುವ ಬಂಗಾರದ ಸರವನ್ನು ಕಸಿದು ಪರಾರಿಯಾಗಿದ್ದರು.

ಕಳವಾದ ಬಂಗಾರದ ಸರದ ಮೌಲ್ಯ ಸುಮಾರು ₹1.50 ಲಕ್ಷ ಎಂದು ಅಂದಾಜಿಸಲಾಗಿದ್ದು, ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಜೂನ್ 26ರಂದು ಮಂಗಳೂರು ನಗರದ ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಸೇರಿಕೊಂಡು ಸರ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಬಂಧಿತರನ್ನು ಉತ್ತರ ಪ್ರದೇಶದ ರವಿ ಬೌರಾ (38) ಹಾಗೂ ಮೊಹಮ್ಮದ್ ಸಾಹಿಲ್ ಅಲಿಯಾಸ್ ಸಿದ್ದೀಖಿ (26) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಬಾಗಲಕೋಟೆಯ ಅಲ್ತಾಫ್ ಹುಸೈನ್ ಪೊಲೀಸ್ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.
ಆರೋಪಿಗಳನ್ನು ಠಾಣೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಅಲ್ತಾಫ್ ಹುಸೈನ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಅವರನ್ನು ತಳ್ಳಿ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ವಿನಾಯಕ ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.

ಪರಾರಿಯಾಗಿರುವ ಅಲ್ತಾಫ್ ಹುಸೈನ್ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದ್ದು, ಆತನ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಆತನ ವಿವರಗಳನ್ನು ಇತರ ಜಿಲ್ಲೆಗಳು ಹಾಗೂ ರಾಜ್ಯಗಳಿಗೂ ರವಾನಿಸಲಾಗಿದೆ.
ಬಂಧಿತರಾದ ರವಿ ಬೌರಾ ಹಾಗೂ ಮೊಹಮ್ಮದ್ ಸಾಹಿಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಜುಲೈ 6ರವರೆಗೆ 10 ದಿನಗಳ ಪೊಲೀಸ್ ಕಸ್ಟಡಿ ವಿಧಿಸಿದೆ.
ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪ್ರಕರಣವನ್ನು ತ್ವರಿತವಾಗಿ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ತನಿಖೆ ಮುಂದುವರಿದಿದೆ.








