ಮಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯದ ಹಲವು ನ್ಯಾಯಾಲಯಗಳ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಸ್ಥಳಗಳಲ್ಲಿ ವ್ಯಾಪಕ ತಪಾಸಣೆ ನಡೆಸಿದರು.
ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಕಳೆದ ಒಂದು ವಾರದ ಅವಧಿಯಲ್ಲಿ ಇದು ಮೂರನೇ ಬಾರಿ ಇಂತಹ ಬೆದರಿಕೆ ಸಂದೇಶ ಸ್ವೀಕರಿಸಿರುವ ಘಟನೆ ಎನ್ನಲಾಗಿದೆ. ಲಭ್ಯ ಮಾಹಿತಿಯ ಪ್ರಕಾರ, ಹಿಂದಿನ ಎರಡು ಇಮೇಲ್‌ಗಳನ್ನು ಒಂದೇ ಇಮೇಲ್ ವಿಳಾಸದಿಂದ ಕಳುಹಿಸಲಾಗಿದ್ದರೆ, ಈ ಬಾರಿ ಬೇರೆ ಇಮೇಲ್ ಖಾತೆಯಿಂದ ಸಂದೇಶ ರವಾನೆಯಾಗಿದೆ. ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ಹಾಗೂ ಶ್ವಾನದಳದ ಸಹಾಯದಿಂದ ನ್ಯಾಯಾಲಯದ ಆವರಣದಲ್ಲಿ ಸಮಗ್ರ ಪರಿಶೀಲನೆ ನಡೆಸಿದರು.
ಇತ್ತ ಮಂಗಳೂರು ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಇಮೇಲ್ ತಲುಪಿತ್ತು. ಎಚ್ಚೆತ್ತ ಭದ್ರತಾ ಸಿಬ್ಬಂದಿ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ತಕ್ಷಣ ಸ್ಥಳಕ್ಕೆ ಧಾವಿಸಿ, ಶ್ವಾನದಳದ ನೆರವಿನೊಂದಿಗೆ ಸಂಪೂರ್ಣ ಆವರಣವನ್ನು ಕೂಲಂಕಷವಾಗಿ ಪರಿಶೀಲಿಸಿದರು. ತಪಾಸಣೆ ವೇಳೆ ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗದ ಕಾರಣ, ಈ ಬೆದರಿಕೆ ಸಂದೇಶವನ್ನು ಹುಸಿ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.
ಹಾವೇರಿ ನ್ಯಾಯಾಲಯಕ್ಕೂ ಸಹ ಬಾಂಬ್ ಬೆದರಿಕೆ ಇಮೇಲ್ ಬಂದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಹಾಗೂ ಸಂಬಂಧಿತ ಭದ್ರತಾ ತಂಡಗಳು ನ್ಯಾಯಾಲಯದ ಆವರಣದಲ್ಲಿ ಪರಿಶೀಲನೆ ನಡೆಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತಂದಿದ್ದಾರೆ.








