ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಸಮೀಪದ ಅರಣ್ಯ ಪ್ರದೇಶದಲ್ಲಿ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯ ಮೇಲೆ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ನಡೆದಿದೆ.
ಕೊಲೆಯಾದವರು ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ನಿವಾಸಿ ಸಂಜನಾ (26) ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ಪತಿ ಭಗವತ್ ಜ್ಞಾನೇಶ್ವರ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಪತ್ನಿ ಜೊತೆ ಬೀದರ್‌ನ ಶಿವನಗರದಲ್ಲಿ ವಾಸವಾಗಿದ್ದನೆಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಪತಿ ಪಕ್ಕದ ಮನೆಯ ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನು. ಇದನ್ನು ಪ್ರಶ್ನಿಸಿದ ಪತ್ನಿಯನ್ನು ಕಾರಿನಲ್ಲಿ ಹೊನ್ನಿಕೇರಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, ಅಲ್ಲಿ ಕಬ್ಬಿಣದ ರಾಡ್‌ನಿಂದ ತಲೆ ಹಾಗೂ ಕತ್ತಿಗೆ ಭೀಕರವಾಗಿ ಹಲ್ಲೆ ನಡೆಸಿದ್ದಾನೆ.
ತೀವ್ರವಾಗಿ ಗಾಯಗೊಂಡಿದ್ದ ಸಂಜನಾಳನ್ನು ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಘಟನೆ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








