ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಮುಖ್ಯ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ ವಜಾಗೊಳಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಹುಬ್ಬಳ್ಳಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಫಯಾಜ್‌ನ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಿಲ್ಲಾ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಹಾಗೂ ತನಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಆರೋಪಿಯು ಹೈಕೋರ್ಟ್ ಮೊರೆ ಹೋಗಿದ್ದನು. ಹೈಕೋರ್ಟ್‌ನಲ್ಲಿ ಉಭಯ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಆರೋಪಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಪರವಾಗಿ ಹಿರಿಯ ನ್ಯಾಯವಾದಿ ರಾಘವೇಂದ್ರ ಮುತ್ತಗಿ ಅವರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು. ಆರೋಪಿ ಮಾಡಿರುವ ಕೃತ್ಯ ಅತ್ಯಂತ ಕ್ರೂರವಾಗಿದ್ದು, ಆತನಿಗೆ ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಮತ್ತು ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.








