ವಿಟ್ಲ: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶದಲ್ಲಿ ಅಕ್ರಮ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜುಲೈ 2, 2026ರಂದು ಸಂಜೆ ವೇಳೆ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದರು. ಈ ವೇಳೆ ಪೊಲೀಸ್ ವಾಹನವನ್ನು ಕಂಡ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ.
ಸ್ಥಳ ಪರಿಶೀಲನೆ ವೇಳೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಗಣಿಗಾರಿಕೆಗೆ ಬಳಸುತ್ತಿದ್ದ ಯಂತ್ರೋಪಕರಣಗಳು, ಅಕ್ರಮ ಮಣ್ಣು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳ, ಮಣ್ಣು ಸಾಗಣೆ ಲಾರಿಗಳ ತೂಕ ಪರಿಶೀಲನೆಗಾಗಿ ನಿರ್ಮಿಸಿದ್ದ ವೇ ಬ್ರಿಡ್ಜ್ ಹಾಗೂ ಕಟ್ಟಡವೂ ಪತ್ತೆಯಾಗಿದೆ.
ಪೊಲೀಸರು ಸ್ಥಳದಲ್ಲಿದ್ದ ಯಂತ್ರೋಪಕರಣಗಳು ಸೇರಿದಂತೆ ಸಂಬಂಧಿತ ಸೊತ್ತುಗಳನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಈ ಸಂಬಂಧ ಮುಳಿಗದ್ದೆ ಝಕಾರಿಯಾ ಹಾಗೂ ಇತರರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 148/2026 ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ, 1957ರ ಕಲಂ 4(1), 21 ಹಾಗೂ ಕರ್ನಾಟಕ ಮೈನರ್ ಮಿನರಲ್ ಕನ್ಸೆಷನ್ ನಿಯಮಗಳು, 1994ರ ಕಲಂ 3 ಮತ್ತು 44ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.








