ಮೈಸೂರು: ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಮೂರು ಪ್ರತ್ಯೇಕ ಭೀಕರ ಘಟನೆಗಳಲ್ಲಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಹಲವು ಆರೋಪಿಗಳನ್ನು ಬಂಧಿಸಿದ್ದಾರೆ.
ಟಿ. ನರಸೀಪುರದಲ್ಲಿ ಘಟನೆ
ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಭೀಕರ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಟಿ. ನರಸೀಪುರದ ಖಾಸಗಿ ಬಸ್ ನಿಲ್ದಾಣದ ಬಳಿ ಇದ್ದ ಯುವತಿಯನ್ನು ಮೂವರು ಆರೋಪಿಗಳು ಅಪಹರಿಸಿದ್ದರು. ಬಳಿಕ ಚಾಮರಾಜನಗರ ತಾಲೂಕಿನ ಸಂತೆಮರಳ್ಳಿಯ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಆಕೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದರು. ಘಟನೆ ನಡೆದ 24 ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಟಿ. ನರಸೀಪುರ ಪೊಲೀಸರು ಸ್ಥಳೀಯ ನಿವಾಸಿಗಳಾದ ಕಿರಣ್, ಕಿಶೋರ್ ಮತ್ತು ರಿಯಾನ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.








