ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ ಕಂಪನಿಗಳು ಹಾಗೂ ಖಾಸಗಿ ಶಾಲೆಗಳಿಗೆ ದತ್ತು ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಶಿಕ್ಷಣ ತಜ್ಞರು, ಚಿಂತಕರು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಪೋಷಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕಾರ್ಪೊರೇಟ್ ಸಂಸ್ಥೆಗಳು ಹಾಗೂ ಖಾಸಗಿ ಶಾಲೆಗಳು ಕಡ್ಡಾಯವಾಗಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಬೇಕು ಎಂದು ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆ ಈಗ ರಾಜ್ಯಾದ್ಯಂತ ಭಾರಿ ಚರ್ಚೆಗೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.
ಸರ್ಕಾರದ ಈ ನಡೆಯನ್ನು ಖಂಡಿಸಿ ಶಿಕ್ಷಣ ತಜ್ಞರು, ಚಿಂತಕರು ಹಾಗೂ ವಿದ್ಯಾರ್ಥಿ ಒಕ್ಕೂಟಗಳು ತುರ್ತು ಸಭೆ ನಡೆಸಿ ತಮ್ಮ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಲಾಭಕ್ಕಾಗಿ ಶಿಕ್ಷಣವನ್ನು ಮಾರಾಟ ಮಾಡುತ್ತಿರುವ ಖಾಸಗಿ ಸಂಸ್ಥೆಗಳಿಗೆ ಸರ್ಕಾರಿ ಶಾಲೆಗಳನ್ನು ಹಸ್ತಾಂತರಿಸುವುದು ಸಾರ್ವಜನಿಕ ಶಿಕ್ಷಣದ ಮೂಲ ಆಶಯಕ್ಕೇ ವಿರುದ್ಧವಾಗಿದೆ. ಇದು ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಲಾಭಕೋರ ಕಂಪನಿಗಳಿಗೆ ವಹಿಸುವ ಹುನ್ನಾರ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಕಟುವಾಗಿ ಖಂಡಿಸಿದೆ.
ಜನರ ತೆರಿಗೆ ಹಣದಿಂದ ನಡೆಯುವ ಸರ್ಕಾರಿ ಶಾಲೆಗಳನ್ನು ಸರ್ಕಾರವೇ ಅಭಿವೃದ್ಧಿಪಡಿಸಬೇಕು. ಅದಕ್ಕಾಗಿ ಮುಂಬರುವ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡಬೇಕೇ ಹೊರತು, ಖಾಸಗಿಯವರ ಕೈಗೆ ನೀಡಬಾರದು ಎಂದು ಆಗ್ರಹಿಸಿದ್ದಾರೆ.
“ಸರ್ಕಾರಕ್ಕೆ ಶಾಲೆ ನಡೆಸಲು ಕಷ್ಟವೇ?”: ಪೋಷಕರ ಪ್ರಶ್ನೆ
ಸರ್ಕಾರಿ ಶಾಲೆಗಳನ್ನು ದತ್ತು ನೀಡುವ ಯೋಜನೆಗೆ ಪೋಷಕರ ವಲಯದಲ್ಲೂ ತೀವ್ರ ವಿರೋಧ ವ್ಯಕ್ತವಾಗಿದೆ. “ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಹಾಗೂ ಅರ್ಹ ಶಿಕ್ಷಕರಿದ್ದಾರೆ. ಹೀಗಿರುವಾಗ ಸರ್ಕಾರಕ್ಕೆ ಶಾಲೆಗಳನ್ನು ನಡೆಸಲು ಕಷ್ಟವೇ? ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಿ, ಗುಣಮಟ್ಟ ಹೆಚ್ಚಿಸುವ ಕೆಲಸವನ್ನು ಸರ್ಕಾರವೇ ಮಾಡಬೇಕು. ಯಾವುದೇ ಕಾರಣಕ್ಕೂ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡಬಾರದು.” ಎಂದು ಪೋಷಕರು ಹೇಳಿದ್ದಾರೆ. ರಾಜ್ಯ ಸರ್ಕಾರವು ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರಿ ಶಾಲೆಗಳನ್ನು ದತ್ತು ನೀಡುವ ಈ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಪ್ರೇಮಿಗಳನ್ನು ಒಗ್ಗೂಡಿಸಿ ಉಗ್ರ ಹೋರಾಟ ರೂಪಿಸುವುದಾಗಿ ಶಿಕ್ಷಣ ತಜ್ಞರು ಮತ್ತು ಸಂಘಟನೆಗಳು ಎಚ್ಚರಿಸಿವೆ.








