ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಬೆಂಗಳೂರು ನಿವಾಸಿ ಮೂರ್ತಿ ಅಲಿಯಾಸ್ ಪಿಂಟು (37) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 64/2017ರಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 395, 397 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರಿಂದ ನ್ಯಾಯಾಲಯವು ಆತನ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು.
ವಾರಂಟ್ ಆಧರಿಸಿ ಕಾರ್ಯಾಚರಣೆ ನಡೆಸಿದ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ ಮತ್ತು ಚರಣ್ ರಾಜ್ ಅವರು ಬೆಂಗಳೂರಿನಲ್ಲಿ ಆರೋಪಿಯ ಸುಳಿವು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದರು.
ಬಂಧಿತನನ್ನು ಆಗಸ್ಟ್ 5ರಂದು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.








