ನವದೆಹಲಿ: ಪೂರ್ವ ದೆಹಲಿಯ ಕಲ್ಯಾಣಪುರಿಯಲ್ಲಿ ಕರ್ತವ್ಯದಲ್ಲಿದ್ದ ಪೌರಕಾರ್ಮಿಕನೊಬ್ಬನನ್ನು ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿದೆ. ಘಟನೆ ಬಳಿಕ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಹಾಗೂ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.
ಮೃತ ಪೌರಕಾರ್ಮಿಕನನ್ನು ಅನಿಲ್ ಎಂದು ಗುರುತಿಸಲಾಗಿದೆ. 27 ವರ್ಷದ ಅನಿಲ್, ದೆಹಲಿ ಮಹಾನಗರ ಪಾಲಿಕೆಯೊಂದಿಗೆ ಸಂಬಂಧ ಹೊಂದಿರುವ ತ್ಯಾಜ್ಯ ಸಂಗ್ರಹ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಗ್ಗೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ದಾಳಿಕೋರನ ಗುರುತು ಪತ್ತೆಹಚ್ಚಲು ಶೋಧ ಕಾರ್ಯ ಮುಂದುವರಿದಿದೆ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡುತ್ತಿವೆ.
ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಆಮ್ ಆದ್ಮಿ ಪಕ್ಷದ ಕಾಂಡ್ಲಿ ಶಾಸಕ ಕುಲದೀಪ್ ಕುಮಾರ್, ಪೌರಕಾರ್ಮಿಕರೊಂದಿಗೆ ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ, ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ಹಾಗೂ ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಅವರು ಎಚ್ಚರಿಕೆ ನೀಡಿದರು.
ಈ ನಡುವೆ ಎಎಪಿ ದೆಹಲಿ ರಾಜ್ಯಾಧ್ಯಕ್ಷ ಸೌರಭ್ ಭಾರದ್ವಾಜ್ ಕೂಡ ಘಟನೆ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜಧಾನಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಪೌರಕಾರ್ಮಿಕನೊಬ್ಬನನ್ನು ಹಾಡಹಗಲೇ ಹತ್ಯೆ ಮಾಡಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಆರೋಪಿಸಿದ್ದಾರೆ. ದೆಹಲಿಯ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಶಾಸಕ ಕುಲದೀಪ್ ಕುಮಾರ್, ಕಲ್ಯಾಣಪುರಿಯಲ್ಲಿ ಇಂತಹ ಹಿಂಸಾತ್ಮಕ ಘಟನೆಗಳು ನಡೆಯುತ್ತಲೇ ಇವೆ ಎಂದು ಆರೋಪಿಸಿದ್ದು, ಜನರ ಮನೆಗಳಿಂದ ಕಸ ಸಂಗ್ರಹಿಸುವ ಪೌರಕಾರ್ಮಿಕನೊಬ್ಬನಿಗೆ ಕರ್ತವ್ಯದಲ್ಲಿದ್ದಾಗಲೇ ಇಂತಹ ಪರಿಸ್ಥಿತಿ ಎದುರಾಗಿರುವುದು ಅತ್ಯಂತ ದುರದೃಷ್ಟಕರ ಎಂದು ಹೇಳಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗದ ಭರವಸೆ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.








