ಮಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಮಂಗಳೂರು ವಿಭಾಗದ ಅಧಿಕಾರಿಗಳು ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಸುವ ಗುತ್ತಿಗೆದಾರರಿಂದ ಶೇ. 7ರಷ್ಟು ಹೆಚ್ಚುವರಿ ಕಮಿಷನ್ಗೆ ಪಟ್ಟುಹಿಡಿದು ಕಿರುಕುಳ ನೀಡುತ್ತಿದ್ದಾರೆ ಎಂದು ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಆರೋಪಿಸಿದ್ದಾರೆ.
ಈ ಕುರಿತು ತಕ್ಷಣವೇ ಸಮಗ್ರ ತನಿಖೆ ನಡೆಸಿ, ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಿಮಿನಲ್ ಹಾಗೂ ಶಿಸ್ತುಕ್ರಮ ಕೈಗೊಳ್ಳುವಂತೆ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಕೆಆರ್ಐಡಿಎಲ್ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಮತ್ತು ಜೂನಿಯರ್ ಇಂಜಿನಿಯರ್ ಪ್ರಜ್ವಲ್ ಎಂಬುವವರು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆ ಎಂದು ಪತ್ರದಲ್ಲಿ ನೇರವಾಗಿ ಉಲ್ಲೇಖಿಸಲಾಗಿದೆ. “ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರಿನಲ್ಲಿ ಇಂಜಿನಿಯರ್ಗಳು ಮಾಸಿಕ ಪಾವತಿಗಳನ್ನು (Monthly cuts) ವಸೂಲಿ ಮಾಡುತ್ತಿದ್ದಾರೆ. ಲಂಚ ನೀಡಲು ನಿರಾಕರಿಸಿದ ಅಥವಾ ಪ್ರಶ್ನಿಸಿದ ಗುತ್ತಿಗೆದಾರರಿಗೆ ಬೆದರಿಕೆ ಹಾಕಿ ಕಿರುಕುಳ ನೀಡುತ್ತಿದ್ದಾರೆ,” ಎಂದು ಶಾಸಕರು ಕಳವಳ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ನಿಧಿಯ ದುರುಪಯೋಗವು ಇಲಾಖೆಯ ಘನತೆಗೆ ಕುಂದು ತರುವುದಲ್ಲದೆ ಸರ್ಕಾರದ ಮೇಲಿನ ಜನರ ವಿಶ್ವಾಸವನ್ನು ದುರ್ಬಲಗೊಳಿಸುತ್ತದೆ. ಸರ್ಕಾರಿ ಕಾಮಗಾರಿಗಳಲ್ಲಿ ಪಾರದರ್ಶಕತೆ, ಕಟ್ಟುನಿಟ್ಟಿನ ನಿಯಮ ಪಾಲನೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ,” ಎಂದು ರೈ ಪ್ರತಿಪಾದಿಸಿದ್ದಾರೆ. ಆರೋಪ ಎದುರಿಸುತ್ತಿರುವ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಮತ್ತು ಗುತ್ತಿಗೆದಾರರಿಂದ ಕಾನೂನುಬಾಹಿರವಾಗಿ ಸಂಗ್ರಹಿಸಲಾದ ಹಣವನ್ನು ವಸೂಲಿ ಮಾಡಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಒತ್ತಾಯಿಸಿದ್ದಾರೆ.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಸಂಸ್ಥೆಯಲ್ಲಿ ನಡೆಯುತ್ತಿರುವ ಕಮಿಷನ್ ದಂದೆ ಕುರಿತು ಮುಖ್ಯಮಂತ್ರಿಗಳಿಗೆ ದೂರು ಪತ್ರ ಬರೆದಿರುವುದು ನಿಜ ಎಂದು ಪುತ್ತೂರು ಶಾಸಕ ಅಶೋಕ್ ರೈ ಸ್ಪಷ್ಟಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಪತ್ರದ ಕುರಿತು ಉದ್ಭವಿಸಿರುವ ಚರ್ಚೆಗಳಿಗೆ ಸ್ಪಷ್ಟನೆ ನೀಡಿದರು.
“ನಾನು ಮುಖ್ಯಮಂತ್ರಿಗಳಿಗೆ ದೂರು ಪತ್ರ ನೀಡಿರುವುದು ನಿಜ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಈ ಕಮಿಷನ್ ದಂದೆ ಇತ್ತು. ಭ್ರಷ್ಟಾಚಾರ ಎಂಬುದು ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಇದೆ. ವಿಚಾರವನ್ನು ಸರ್ಕಾರದ ಗಮನಕ್ಕೆ ತಂದು ನಾನು ಶಾಸಕನಾಗಿ ನನ್ನ ಕರ್ತವ್ಯ ಮಾಡಿದ್ದೇನೆ.”
— ಅಶೋಕ್ ರೈ, ಪುತ್ತೂರು ಶಾಸಕ








