ನವದೆಹಲಿ:ಇತ್ತೀಚೆಗೆ ನಡೆದ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.
ವಿದ್ಯಾರ್ಥಿಗಳಿಗೆ ಪರಿಹಾರ ನೀಡಲು ಸಂವಿಧಾನದ ವಿಧಿ 142ರ ಅಡಿಯಲ್ಲಿ ತನಗಿರುವ ವಿಶೇಷ ಅಧಿಕಾರವನ್ನು ಬಳಸಿದ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ದೆಹಲಿ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ರಾಜ್ಯಗಳಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ರದ್ದುಗೊಳಿಸಿ ಆದೇಶಿಸಿದೆ.ಆದರೆ, ಸಾಮಾನ್ಯ ವಿದ್ಯಾರ್ಥಿಗಳಿಗೆ ಈ ಆದೇಶದಿಂದ ರಕ್ಷಣೆ ಸಿಕ್ಕಿದ್ದರೂ, ಈ ಹಿಂದೆ ಕ್ರಿಮಿನಲ್ ಹಿನ್ನೆಲೆ ಹೊಂದಿರುವ 2,873 ವ್ಯಕ್ತಿಗಳ ವಿರುದ್ಧ ದೆಹಲಿ ಪೊಲೀಸರು ಪ್ರತ್ಯೇಕವಾಗಿ ಹೊಸ ಎಫ್‌ಐಆರ್ ದಾಖಲಿಸಿ ತನಿಖೆ ಮುಂದುವರಿಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಹಾಗೇ, ನೀಟ್ (NEET) 2026ರ ಗೊಂದಲಗಳಿಂದಾಗಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಮುಂದಿನ 3 ತಿಂಗಳೊಳಗೆ ಸೂಕ್ತ ನೀತಿಯನ್ನು ರೂಪಿಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.
ಜುಲೈ 20ರಿಂದ 25ರವರೆಗೆ ದೆಹಲಿಯ ಜಂತರ್ ಮಂತರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಚಳವಳಿಯಲ್ಲಿ ಭಾಗವಹಿಸಿದ್ದರು. ಈ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಒಟ್ಟು 13 ಎಫ್‌ಐಆರ್‌ಗಳನ್ನು ದಾಖಲಿಸಿದ್ದರು.








