ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಲೇ, ಮನೆಯಲ್ಲಿ ರಾಜಾರೋಷವಾಗಿ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಆರೋಪಕ್ಕೆ ಒಳಗಾಗಿದ್ದ ಸ್ಟಾಫ್ ನರ್ಸ್ ವಿರುದ್ಧ ಕೊನೆಗೂ ಆರೋಗ್ಯ ಇಲಾಖೆ ಶಿಸ್ತುಕ್ರಮ ಜರುಗಿಸಿದೆ. ಆರೋಪಿತ ಸಿಬ್ಬಂದಿ ಜಿ.ಬಿ.ಸುನಿತಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಘಟನೆಯ ವಿವರ:
ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶುಶ್ರೂಷಕಿ (ಸ್ಟಾಫ್ ನರ್ಸ್) ಜಿ.ಬಿ. ಸುನಿತಾ, ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಗ್ರಾಮದಲ್ಲಿರುವ ತಮ್ಮ ಸ್ವಂತ ನಿವಾಸದಲ್ಲೇ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಅಕ್ರಮವಾಗಿ ಕ್ಲಿನಿಕ್ ತೆರೆದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಸಂಸದ ಡಾ. ಕೆ. ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ತವರು ನೆಲವಾದ ಪೆರೇಸಂದ್ರದಲ್ಲೇ ಈ ಅಕ್ರಮ ದಂಧೆ ರಾಜಾರೋಷವಾಗಿ ನಡೆಯುತ್ತಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಮಾಧ್ಯಮಗಳ ವರದಿಗೆ ಮಣಿದ ಇಲಾಖೆ:
ಅಕ್ರಮ ಕ್ಲಿನಿಕ್ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿ, ಮಾಧ್ಯಮಗಳಲ್ಲಿ ನಿರಂತರವಾಗಿ ವರದಿ ಪ್ರಕಟವಾಗಿದ್ದರೂ ಆರಂಭದಲ್ಲಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಘಟನೆ ನಡೆದು ಬರೋಬ್ಬರಿ 15 ದಿನಗಳು ಕಳೆದರೂ ಕ್ರಮ ಕೈಗೊಳ್ಳದ ಬಗ್ಗೆ ಆಕ್ಷೇಪಗಳು ವ್ಯಕ್ತವಾದ ಬೆನ್ನಲ್ಲೇ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ನವೀನ್ ಭಟ್ ಅವರ ಸೂಚನೆಯ ಮೇರೆಗೆ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ. ಹೆಚ್.ಸಿ. ಚೇತನ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಇಲಾಖಾ ತನಿಖೆಗೆ ಆದೇಶ:
ಕೇವಲ ಅಮಾನತಿಗೆ ಸೀಮಿತಗೊಳ್ಳದೆ, ನರ್ಸ್‌ನ ಕರ್ತವ್ಯಲೋಪ ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಸಮಗ್ರ ಇಲಾಖಾ ತನಿಖೆಗೂ ಆರೋಗ್ಯ ಇಲಾಖೆ ಆದೇಶಿಸಿದೆ. ನಿಯಮಬಾಹಿರವಾಗಿ ವೈದ್ಯಕೀಯ ಚಿಕಿತ್ಸೆ ನೀಡುತ್ತಿದ್ದ ಆರೋಪದ ಬಗ್ಗೆ ತನಿಖಾ ವರದಿ ಬಂದ ಬಳಿಕ ಮುಂದಿನ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.








