ಕೋಲಾರ : ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದೊಡ್ಡಕಾರಿ ಬಳಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇ ಕಾರಿಡಾರ್‌ನಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ದಾರುಣ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಮತ್ತೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸಿಗಳಾದ ಶಾರದಮ್ಮ (70), ದೀಕ್ಷಿತಾ (25), ದೇವೇಂದ್ರ ಕುಮಾರ್ (41) ಮತ್ತು ಜಿಷ್ಣು (13) ಅಪಘಾತದಲ್ಲಿ ಕೊನೆಯುಸಿರೆಳೆದ ದುರ್ದೈವಿಗಳು. ವೇಗವಾಗಿ ಚಲಿಸುತ್ತಿದ್ದ ಟೊಯೊಟಾ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಪ್ರಚಂಡ ವೇಗದಲ್ಲಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಕಾರಿನ ಚಾಲಕ ವಿಕಾಸ್, ನೀತು, ಆದ್ವಿಕ ಹಾಗೂ ಕವಿತಾ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಬಂಗಾರಪೇಟೆ ಹಾಗೂ ಕೋಲಾರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಬೇತಮಂಗಲ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.








