ಬೆಂಗಳೂರು: ಪ್ರಭಾವಿ ಸಚಿವ ಹಾಗೂ ಡಿ.ಕೆ.ಶಿವಕುಮಾರ್ ಸರ್ಕಾರದ ಸಂಪುಟದ ಸಚಿವ ಸತೀಶ್ ಜಾರಕಿಹೊಳಿಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ.
ಕಳೆದ ಜೂನ್ ತಿಂಗಳಿನಲ್ಲಿ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತ ಸಂಬಂಧಿ ಹಾಗೂ ಅಬಕಾರಿ ಇಲಾಖೆ ಅಧಿಕಾರಿಯಾಗಿದ್ದ ವೈ. ಮಂಜುನಾಥ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ಬೃಹತ್ ದಾಳಿ ನಡೆಸಿ ಶಾಕ್ ನೀಡಿದ್ದರು. ಆ ಘಟನೆಯ ಬಿಸಿ ಆರುವ ಮುನ್ನವೇ, ಇದೀಗ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೇರವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆಯೇ ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿ ಮತ್ತೊಂದು ಬಿಗ್ ಶಾಕ್ ನೀಡಿದ್ದಾರೆ.
ಇಂದು ಬೆಳಿಗ್ಗೆ ಎರಡು ಪ್ರತ್ಯೇಕ ಕಾರುಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳ ತಂಡವು ಸಚಿವರ ಮನೆಯೊಳಗೆ ಪ್ರವೇಶಿಸಿ ಪರಿಶೀಲನೆ ಆರಂಭಿಸಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಬಾರ್ ಲೈಸೆನ್ಸ್ ಅಕ್ರಮ ಹಾಗೂ ಹವಾಲಾ ಹಣಕಾಸು ವ್ಯವಹಾರದ ಲಿಂಕ್ ಆಧಾರದ ಮೇಲೆ ಈ ಶೋಧ ನಡೆಸಲಾಗುತ್ತಿದೆ. ಮನೆಯಲ್ಲಿರುವ ಪ್ರಮುಖ ದಾಖಲೆಗಳು, ಆಸ್ತಿ ಪತ್ರಗಳು ಮತ್ತು ಬ್ಯಾಂಕ್ ಖಾತೆಗಳ ವಿವರಗಳನ್ನು ತೀವ್ರ ತನಿಖೆಗೆ ಒಳಪಡಿಸಲಾಗುತ್ತಿದ್ದು, ಪ್ರಮುಖ ಸಾಕ್ಷ್ಯಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಸಚಿವರ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.








