ಕುಮಟಾ : ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 12 ಮಂದಿ ಪ್ರಯಾಣಿಕರು ಗಾಯಗೊಂಡು, ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕುಮಟಾ ತಾಲೂಕಿನ ದೇವಿಮನೆ ಘಟ್ಟದ ಮಾಸ್ತಿಹಳ್ಳದ ಬಳಿ ಗುರುವಾರ ರಾತ್ರಿ ನಡೆದಿದೆ.
ಬಾಗಲಕೋಟೆಯಿಂದ ಶಿರಸಿ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 12ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಘಟನೆ ಬಳಿಕ ಕುಮಟಾ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾದರು. ಘಟನೆಯಲ್ಲಿ 40 ವರ್ಷದ ಮಹಿಳೆ ಭಟ್ಕಳದ ಪರ್ವಿನ್ ಮೃತಪಟ್ಟಿದ್ದಾರೆ.
ಬಾಗಲಕೋಟೆಯಿಂದ ಶಿರಸಿ ಮಾರ್ಗವಾಗಿ ದೇವಿಮನೆ ಘಟ್ಟದ ಮೂಲಕ ಧರ್ಮಸ್ಥಳದತ್ತ ಸಾಗುತ್ತಿದ್ದ ಬಸ್, ಮಾಸ್ತಿಹಳ್ಳದ ಸಮೀಪದ ಕಡಿದಾದ ತಿರುವಿನಲ್ಲಿ ಚಲಿಸುತ್ತಿದ್ದಾಗ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಬಸ್ ರಸ್ತೆ ಬದಿಯ ತಡೆಗೋಡೆ ದಾಟಿ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಕುಮಟಾ ಪೊಲೀಸ್ ಠಾಣೆಯ ಪಿಎಸ್‌ಐ ಖಾದರ್ ಹಾಗೂ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಕಂದಕದಲ್ಲಿದ್ದ ಗಾಯಾಳುಗಳನ್ನು ಸ್ಥಳೀಯ ನಿವಾಸಿಗಳ ನೆರವಿನೊಂದಿಗೆ ಪೊಲೀಸರು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕುಮಟಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಸ್‌ನ ತಾಂತ್ರಿಕ ದೋಷವೇ ಅಥವಾ ಚಾಲಕನ ಅಜಾಗರೂಕತೆಯೇ ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.








