ಚಿತ್ರದುರ್ಗ : ಚಲಿಸುತ್ತಿದ್ದ ಲಾರಿಯ ಟೈರ್ ದಿಢೀರ್ ಬರ್ಸ್ಟ್ ಆದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದು ಕೊಪ್ಪಳ ಮೂಲದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ (ಕಸ್ತೂರಿ ರಂಗಪ್ಪನಹಳ್ಳಿ) ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಂಗಳವಾರ ಸಂಜೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಶಶಿಧರ್ (22), ಕುಷ್ಟಗಿ ತಾಲೂಕಿನ ಮಡಿಕೇರಿ ಗ್ರಾಮದ ಮಂಜುನಾಥ್ (22) ಹಾಗೂ ನಿಡಸೇಸಿ ಗ್ರಾಮದ ಬಸವರಾಜ್ (21) ಮೃತಪಟ್ಟ ಯುವಕರು.
ನಿಡಸೇಸಿ ಗ್ರಾಮದ ಹನುಮೇಶ್ (22) ಹಾಗೂ ಪ್ರವೀಣ್ (20) ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ಸೇರಿ ಐವರು ಸ್ನೇಹಿತರು ಕಾರಿನಲ್ಲಿ ಬೆಂಗಳೂರಿನಿಂದ ಸ್ವಗ್ರಾಮ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣಕ್ಕೆ ತೆರಳುತ್ತಿದ್ದರು. ಹಿರಿಯೂರು ತಾಲೂಕಿನ ಕಸ್ತೂರಿ ರಂಗಪ್ಪನಹಳ್ಳಿ ಗೇಟ್ ಸಮೀಪಿಸುತ್ತಿದ್ದಂತೆ, ಮುಂಭಾಗದಲ್ಲಿ ಸಾಗುತ್ತಿದ್ದ ಲಾರಿಯ ಟೈರ್ ದಿಢೀರನೆ ಬರ್ಸ್ಟ್ ಆಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯ ಎಡಭಾಗಕ್ಕೆ ತಿರುಗಿದೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಸಿಗದೆ ಲಾರಿಗೆ ಬಲವಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನೆಜ್ಜುಗುಜ್ಜಾಗಿದ್ದು, ಕಾರು ಚಾಲಕ ಸೇರಿ ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ.
ಅಪಘಾತದ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಹಿರಿಯೂರು ಉಪವಿಭಾಗದ ಡಿವೈಎಸ್ಪಿ ಗೋಪಾಲಕೃಷ್ಣ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೆ.ಎನ್. ಚಂದ್ರಶೇಖರ್ ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಖಂಗೊಂಡ ವಾಹನಗಳನ್ನು ಹೆದ್ದಾರಿಯಿಂದ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಈ ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.








