ನವದೆಹಲಿ: ದೆಹಲಿಯಲ್ಲಿ ನಿಗದಿಯಾಗಿದ್ದ ಪ್ರತಿಭಟನೆ ಮತ್ತು ‘ಲೆಹ್ರಾ ದೋ ತಿರಂಗಾ’ ರ್ಯಾಲಿಗೂ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಎಐಎಸ್ಎ ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಕಸ್ಟಡಿಗೆ ಪಡೆದ ಬಳಿಕ ಬಿಡುಗಡೆ ಮಾಡಲಾಗಿದೆ.
ಚುನಾವಣಾ ಆಯೋಗದ ವಿರುದ್ಧ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಕ್ಟೋಬರ್ 16 ರಂದು ಸಂಜೆ 5 ಗಂಟೆಗೆ ದೆಹಲಿಯ ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ರಾಷ್ಟ್ರಧ್ವಜದೊಂದಿಗೆ ಮೆರವಣಿಗೆಗೆ ಸಿಜೆಪಿ ಕರೆ ನೀಡಿತ್ತು. ಆದರೆ, ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರು. ಜೊತೆಗೆ ಎನ್ಡಿಎಂಸಿ ಆಡಳಿತಾತ್ಮಕ ಕಾರಣಗಳನ್ನು ಉಲ್ಲೇಖಿಸಿ ಅಕ್ಟೋಬರ್ 16 ಮತ್ತು 17ರಂದು ಉದ್ಯಾನವನವು ಮುಚ್ಚಲಾಗುತ್ತದೆ ಎಂದು ಆದೇಶಿಸಿತ್ತು.
ಆದರೆ ಇದೀಗ ನಿಷೇದಾಜ್ಞೆ ಉಲ್ಲಂಘಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗಿದ್ದ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಜೆಪಿಯ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅವರನ್ನು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಲಾಗುತ್ತಿದೆ.
ಎಐಎಸ್ಎ ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಮೊದಲಿಗೆ ಪೊಲೀಸರು ಕಸ್ಟಡಿಗೆ ಪಡೆದಿದ್ದರು. ದೆಹಲಿ ಪೊಲೀಸ್ ಕಾಯಿದೆಯ ಸೆಕ್ಷನ್ ೬೫ರ ಅಡಿಯಲ್ಲಿ ಅಗತ್ಯ ಬಂಧನ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ನೇಹಾ ಬೋರಾ ಅವರನ್ನು ಬಿಡುಗಡೆ ಮಾಡಲಾಗಿದೆ.








