ಕಡಬ: ಅಪ್ರಾಪ್ತ ಬಾಲಕಿಯ ಮನೆಗೆ ತೆರಳಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಕಡಬ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬದ ನೂಜಿಬಾಳ್ತಿಲ ನಿವಾಸಿ ಸದ್ದಾಂ (34) ಶಿಕ್ಷೆಗೊಳಗಾದ ಆರೋಪಿ. ಬಾಲಕಿಯ ಮನೆಗೆ ತೆರಳಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಬೆದರಿಕೆ ಹಾಕಿದ್ದ ಆರೋಪದಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಉಪ್ಪಿನಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕೆ. ಅವರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪುತ್ತೂರು ಕಾರ್ಯನಿರ್ವಹಣೆ) ಪ್ರಕರಣದ ವಿಚಾರಣೆ ನಡೆಸಿತು. ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯ ಸೆಕ್ಷನ್ 5(ಎಲ್), 5(ಜೆ)(ii) ಹಾಗೂ 6ರ ಅಡಿಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹50,000 ದಂಡ ವಿಧಿಸಿದ್ದಾರೆ.
ಇದಲ್ಲದೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506ರ ಅಡಿಯಲ್ಲಿ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗಲಿವೆ ಎಂದು ನ್ಯಾಯಾಲಯ ಆದೇಶಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಆರೋಪಿ ಸದ್ದಾಂ ಕಡಬ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಆತನ ವಿರುದ್ಧ ಕಡಬ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆಯೂ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅಡಂತಾಯ ಅವರು ವಾದ ಮಂಡಿಸಿದ್ದರು.








